Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on October 7
ಜಗಳೂರಿನಲ್ಲಿ ಬರ ಅಧ್ಯಯನ ಕೈಗೊಂಡ ಕೇಂದ್ರ ತಂಡ, ಬೆಳೆ ವೀಕ್ಷಣೆ
ಜಗಳೂರು ಸುದ್ದಿ:ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಗಳೂರು ತಾಲ್ಲೂಕಿನ ವಿವಿಧ ಗ್ರಾಮಗಳಾದ ಮುಸ್ಟೂರು,ದೊಣ್ಣೆಹಳ್ಳಿ,ಹಿರೇಮಲ್ಲನಹೊಳೆ,ಸಿದ್ದಿಹಳ್ಳಿ,ಭರಮಸಮುದ್ರ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿದರು
ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ. ಶ್ರೀನಿವಾಸ ರೆಡ್ಡಿ ಅವರನ್ನು ಒಳಗೊಂಡ ಕೇಂದ್ರ ಬರ ಅಧ್ಯಯನ ತಂಡವನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಅವರು ಸ್ವಾಗತಿಸಿದರು.
ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ನೇತೃತ್ವದ ತಂಡವು ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬರದಿಂದ ಆಗಿರುವ ಬೆಳೆ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿ, ರೈತರು ಮತ್ತು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು
ಶಾಸಕ ಬಿ.ದೆವೇಂದ್ರಪ್ಪ ನಂತರ ಮಾತನಾಡಿ,ರಾಜ್ಯದ 224 ಕ್ಷೇತ್ರಗಳಲ್ಲಿ ಜಗಳೂರು ತಾಲೂಕು ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಸ್ವಾತಂತ್ರ್ಯ ನಂತರ ಕೇವಲ ನಾಲ್ಕು ವರ್ಷ ಮಾತ್ರ ಮಳೆ ಬೆಳೆ ಫಸಲು ಚೆನ್ನಾಗಿದೆ.ಸಾಗುವಳಿ ನಂತರ ಬೆಳೆಗಳ ಸಾಲಿನಲ್ಲಿ ಕನಿಷ್ಠ 30 ಮಿ.ಮೀ ಮಳೆಯಿಲ್ಲದೆ ಸಸಿಗಳು ಮಣ್ಣಿನ ಸಮತೋಲನವಾಗಿದೆ.ಮಣ್ಣು ಹೆಪ್ಪುಗಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು
.
ಬರಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲು ಕೇಂದ್ರ ಬರ ಅಧ್ಯಯನ ತಂಡವು ಮೊದಲಿಗೆ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮದ ರೈತರಾದ ಜಯಮ್ಮ ಅವರ 4 ಎಕರೆ ರಾಗಿ, ಸೋಮಶೇಖರ್ ಅವರ 1.39 ಎಕರೆಯಲ್ಲಿ ಬೆಳೆದಿರುವ ರಾಗಿ, ತಿಪ್ಪೇರುದ್ರಪ್ಪ ಅವರ 3 ಎಕರೆ ಮೆಕ್ಕೆಜೋಳ ಬೆಳೆ ವೀಕ್ಷಣೆ ನಂತರ ಶಾಂತಮ್ಮ ನವರು ಬೆಳೆದ ನವಣೆ ವೀಕ್ಷಣೆ ಮಾಡಿದರು. ರೈತರು ಹಾಗೂ ಅಧಿಕಾರಿಗಳು ಮಳೆಯ ಕೊರತೆಯಿಂದ ಬೆಳೆ ಹಾನಿಯಾದ ಬಗ್ಗೆ ಪೈರುಗಳನ್ನು ತೋರಿಸಿ, ಬರದ ತೀವ್ರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ರೈತರು ಮುಂಗಾರು ಮಳೆ ಇಲ್ಲದೆ ಬೆಳೆ ಹಾನಿಯಾದ ಬಗ್ಗೆ ಹಾಗೂ ಉಂಟಾದ ನಷ್ಟದ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡು, ಬೆಳೆ ನಷ್ಟ ಪರಿಹಾರಕ್ಕೆ ರೈತರು ಮನವಿ ಮಾಡಿದರು.
ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯ ಬರಪರಿಸ್ಥಿತಿ ಅಧ್ಯಯನ ಮಾಡಲು ಹಾಗೂ ವಿಸ್ತೃತ ವರದಿ ನೀಡಲು ಜಿಲ್ಲೆಯ ಜಗಳೂರು ತಾಲ್ಲೂಕಿಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದ್ದು, ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರಪರಿಶೀಲನೆ ನಡೆಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಶೇ.93ರಷ್ಟು ಬಿತ್ತನೆಯಾಗಿದ್ದು, ತೀವ್ರ ಬರಪರಿಸ್ಥಿತಿ ಕಾರಣದಿಂದಾಗಿ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅದರಂತೆ ಜಂಟಿ ಸಮೀಕ್ಷೆ ಮಾಡಿ 1.57 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಇನ್‍ಪುಟ್ ಸಬ್ಸಿಡಿ ನೀಡುವಂತೆ ವರದಿ ಸಲ್ಲಿಸಿದ್ದು, ಆ ವರದಿಯಂತೆ ಬರಪರಿಸ್ಥಿತಿ ಪರಿಶೀಲಿಸಿ, ವಿಸ್ತೃತ ವರದಿ ನೀಡಲು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವ ವಹಿಸಿರುವ ತಂಡ ಆಗಮಿಸಿದ್ದು, ಈ ತಂಡವು ರಾಗಿ ಮತ್ತು ಮೆಕ್ಕೆಜೋಳ ಬೆಳೆದ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಇನ್ನೂ ಹಲವು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಮಾಡಲಿದೆ. ಒಟ್ಟಾರೆಯಾಗಿ ಜಿಲ್ಲೆಯ ಬರದ ಸ್ಥಿತಿಯ ಕುರಿತು ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಿದ ತಕ್ಷಣ ಎಲ್ಲ ರೈತರಿಗೆ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.
ದಾವಣಗೆರೆ ಜಿಲ್ಲೆಯಲ್ಲಿ 2.27 ಲಕ್ಷ ಹೆಕ್ಟೇರ್ ಪೈಕಿ 1.57 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿಮೆ ಕಂಪನಿಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮಕೈಗೊಂಡು 47 ಸಾವಿರ ರೈತರಿಗೂ ಬೆಳೆ ವಿಮೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು ಎಂದರು.
ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್,ದಾವಣಗೆರೆ ಉಪಾ ವಿಭಾಗ ಅಧಿಕಾರಿ ದುರ್ಗಾಶ್ರೀ .ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್,ಉಪನಿರ್ದೇಶಕ ಶ್ರೀನಿವಾಸ್, ತೋಟಗಾರಿಕೆ ಇಲಾಖೆ ಎಕ್ಸೂಟಿವ್ ಇಂಜಿನಿಯರ್ ರವೀಂದ್ರ ನಾಯ್ಕ್,
ಎಡಿ ತೋಟಯ್ಯ,ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್ ಕಿಮಾವತ್,ಸಿಪಿಐ ಶ್ರೀನಿವಾಸ್ ರಾವ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.